ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆಯಾಗುತ್ತಿದ್ದು, ನಾಳೆಯೂ ಮುಂದುವರೆಯುವ ಸಾಧ್ಯತೆಗಳಿವೆ.  ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು ಇನ್ನು ಒಂದು ವಾರ ಮೋಡ ಕವಿದ ವಾತಾವರಣ ಮುಂದುವರೆಯುವ ಸೂಚನೆಗಳು ಕಂಡುಬರುತ್ತಿವೆ.

ಅರಬ್ಬೀಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಇನ್ನು ಎರಡು ದಿನ ಸಾಧಾರಣ ಪ್ರಮಾಣದ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್.ಪ್ರಕಾಶ್ ಈ ಸಂಜೆಗೆ ತಿಳಿಸಿದರು.

ಬೆಂಗಳೂರು, ಮೈಸೂರು, ಕೊಡುಗು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗಿದೆ. ಕರಾವಳಿ ಮಳೆನಾಡು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ ಮುಂದುವರೆಯಲಿದೆ. ಆದರೆ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾಗಶಃ ಮೋಡ ಕವಿದ ವಾತಾವರಣ ಇದೇ ರೀತಿ ಜ.12ರವರೆಗೂ ಮುಂದುವರೆಯುವ ಮುನ್ಸೂಚನೆಗಳಿವೆ ಎಂದು ಹೇಳಿದರು.

ಅರಬ್ಬೀಸಮುದ್ರ ಮತ್ತು ಬಂಗಾಳಕೊಲ್ಲಿ ಎರಡೂ ಕಡೆ ಏಕಕಾಲದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದೆ. ಕೊಪ್ಪಳ, ಬಳ್ಳಾರಿ ಸೇರಿದಂತೆ ಉತ್ತರಕರ್ನಾಟಕದ ಕೆಲ ಭಾಗಗಳಲ್ಲೂ ಮೋಸ ಮುಸುಕಿದ ವಾತಾವರಣ ಕಂಡುಬರುತ್ತಿದೆ. ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದರು.

You Might Also Like

" data-numposts="10" data-width="">